ಮಂಡ್ಯ: ದೇಶದಲ್ಲಿ ದಿನೇ ದಿನೇ ಗಗನಕ್ಕೇರುತ್ತಿರುವ ಪೆಟ್ರೋಲ್, ಡೀಸೆಲ್ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ಖಂಡಿಸಿ ಕನ್ನಡ ಚಳುವಳಿ ವಾಟಾಳ್ ಪಕ್ಷದ ನಾಯಕ ವಾಟಾಳ್ ನಾಗರಾಜ್ ಅವರು ಮಂಡ್ಯದಲ್ಲಿ ಎತ್ತಿನಗಾಡಿ ಚಲಾಯಿಸುವ ಮೂಲಕ ವಿನೂತನವಾಗಿ ಪ್ರತಿಭಟಿಸಿದರು.
ಮಂಡ್ಯದ ಸಿಲ್ವರ್ ಜ್ಯೂಬಿಲಿ ಪಾರ್ಕ್‌ನಿಂದ ಸಂಜಯ್ ವೃತ್ತದವರೆಗೂ ನೂರಾರು ಕಾರ್ಯಕರ್ತರೊಂದಿಗೆ ಎತ್ತಿನಗಾಡಿ ಮೆರವಣಿಗೆ ನಡೆಸಿದ ಅವರು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿ ಧಿಕ್ಕಾರ ಕೂಗಿದರು.
ಜನರಿಗೆ ನರಕದ ಪರಿಸ್ಥಿತಿ: ವಾಟಾಳ್ ಆಕ್ರೋಶ
ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ವಾಟಾಳ್ ನಾಗರಾಜ್, “ಅತಿಯಾದ ಬೆಲೆ ಏರಿಕೆಯಿಂದಾಗಿ ಸಾಮಾನ್ಯ ಜನರಿಗೆ ಬದುಕು ನಡೆಸುವುದು ನರಕದಂತಾಗಿದೆ. ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಯಿಂದಾಗಿ ಬಡ ಜನರು ಊಟ ಮಾಡುವುದಕ್ಕೂ ಕಷ್ಟಪಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಸರ್ಕಾರಗಳು ತಕ್ಷಣವೇ ಬೆಲೆ ಇಳಿಕೆ ಮಾಡಿ ಜನರ ಪರವಾಗಿ ನಿಲ್ಲಬೇಕು. ಇಲ್ಲದಿದ್ದರೆ ಮುಂಬರುವ ದಿನಗಳಲ್ಲಿ ಕರ್ನಾಟಕ ಬಂದ್‌ಗೆ ಕರೆ ನೀಡಲಾಗುವುದು,” ಎಂದು ಎಚ್ಚರಿಸಿದರು.
ಬೆಳಗಾವಿ ವಿಷಯ ಹಾಗೂ ಸಚಿವರಿಗೆ ಎಚ್ಚರಿಕೆ
ಇದೇ ಸಂದರ್ಭದಲ್ಲಿ ಬೆಳಗಾವಿ ಗಡಿ ವಿಚಾರದ ಬಗ್ಗೆ ಮಾತನಾಡಿದ ಅವರು, “ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ ಎಂದು ನಿರ್ಣಯ ಕೈಗೊಳ್ಳಲು ವಿರೋಧ ವ್ಯಕ್ತಪಡಿಸಲಾಗುತ್ತಿದೆ. ಇದನ್ನು ಸಹಿಸಲು ಸಾಧ್ಯವಿಲ್ಲ. ಬೆಳಗಾವಿ ವಿಚಾರದಲ್ಲಿ ಪುರಸಭೆಗೆ ಮುತ್ತಿಗೆ ಹಾಕಿ ಹೋರಾಟ ನಡೆಸುತ್ತೇವೆ,” ಎಂದರು. ಅಲ್ಲದೆ, “ರಾಜ್ಯದ ಮಂತ್ರಿಗಳು ಬೆಲೆ ಏರಿಕೆ ವಿರುದ್ಧ ಧ್ವನಿ ಎತ್ತಬೇಕು, ಇಲ್ಲದಿದ್ದರೆ ಅವರ ನಿವಾಸಗಳಿಗೂ ಮುತ್ತಿಗೆ ಹಾಕಲಾಗುವುದು,” ಎಂದು ಎಚ್ಚರಿಕೆ ನೀಡಿದರು.
ಹಲವು ನಾಯಕರ ಭಾಗಿ: ಈ ವಿನೂತನ ಪ್ರತಿಭಟನಾ ಮೆರವಣಿಗೆಯಲ್ಲಿ ಕನ್ನಡ ಸೇನೆ ರಾಜ್ಯಾಧ್ಯಕ್ಷ ಕುಮಾರ್, ಜಿಲ್ಲಾಧ್ಯಕ್ಷ ಮಂಜುನಾಥ್, ಪಾರ್ಥಸಾರಥಿ ಸೇರಿದಂತೆ ಹಲವಾರು ಕನ್ನಡಪರ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಭಾಗವಹಿಸಿ ಸರ್ಕಾರಗಳ ವಿರುದ್ಧ ಘೋಷಣೆಗಳನ್ನು ಕೂಗಿದರು.




