ಬೆಂಗಳೂರು: ನನ್ನ ವಿರುದ್ಧ ಪಿತೂರಿ ಮಾಡಿದವರಿಗೂ ಒಳ್ಳೆಯದಾಗಲಿ, ಅವರೂ ಚೆನ್ನಾಗಿರಲಿ ಎಂದು ಶಾಸಕ ಜಮೀರ್ ಅಹ್ಮದ್ ಖಾನ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ದಾವಣಗೆರೆ ಉಪಚುನಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ತಪ್ಪು ಮಾಹಿತಿ ಹಾಗೂ ಸುಳ್ಳು ಸುದ್ದಿ ಹರಡಲಾಗಿದೆ ಎಂದು ಕಿಡಿಕಾರಿದ್ದಾರೆ.
ರಾಜ್ಯದಲ್ಲಿ ಸಂಪುಟ ವಿಸ್ತರಣೆಯ ಕಸರತ್ತು ಜೋರಾಗಿ ನಡೆಯುತ್ತಿರುವಂತೆಯೇ ರಾಜಕೀಯ ವಲಯದಲ್ಲಿ ಅತಿದೊಡ್ಡ ಬೆಳವಣಿಗೆಯೊಂದು ನಡೆದಿದ್ದು, ಶಾಸಕ ಜಮೀರ್ ಅಹ್ಮದ್ ಖಾನ್ ಅವರು ಕಾಂಗ್ರೆಸ್ ಹೈಕಮಾಂಡ್ ಹಾಗೂ ರಾಜ್ಯದ ಪ್ರಮುಖ ನಾಯಕರು ಕ್ಷಮೆಯಾಚಿಸಿದ್ದಾರೆ.
ನಾನು ಯಾವುದೇ ತಪ್ಪು ಮಾಡಿಲ್ಲ. ಒಂದು ವೇಳೆ ನನ್ನಿಂದ ಏನಾದರೂ ತಪ್ಪಾಗಿದ್ದರೆ ಕ್ಷಮೆ ಕೇಳುತ್ತೇನೆ ಎಂದು ಹೇಳಿದ ಅವರು, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಿಎಂ ಡಿ.ಕೆ. ಶಿವಕುಮಾರ್ ಹಾಗೂ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರಲ್ಲಿ ಕ್ಷಮೆಯಾಚಿಸಿದ್ದಾರೆ.
ದಾವಣಗೆರೆ ಉಪಚುನಾವಣೆಯಲ್ಲಿ ಮುಸ್ಲಿಂ ಸಮುದಾಯದ ಅಭ್ಯರ್ಥಿಗೆ ಟಿಕೆಟ್ ನೀಡುವಂತೆ ತಾನು ಮನವಿ ಮಾಡಿದ್ದು ನಿಜ ಎಂದು ಸ್ವಷ್ಟಪಡಿಸಿದ ಅವರು, ಬಳಿಕ ಅಗಲಿದ ನಾಯಕರ/ಮೃತರ ಕುಟುಂಬಕ್ಕೇ ಟಿಕೆಟ್ ನೀಡುವುದು ಸೂಕ್ತ ಎಂಬ ತೀರ್ಮಾನಕ್ಕೆ ಬರಲಾಯಿತು ಎಂದು ಹಿನ್ನೆಲೆಯನ್ನು ವಿವರಿಸಿದರು.
ತಮ್ಮ ವಿರುದ್ಧ ಕೆಲವರು ವ್ಯವಸ್ಥಿತವಾಗಿ ಷಡ್ಯಂತ್ರ ಹಾಗೂ ಪಿತೂರಿ ನಡೆಸಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ.ತಮ್ಮ ವಿರುದ್ಧ ಗೂಢಚರ್ಯೆ ಅಥವಾ ಮಸಲತ್ತು ನಡೆಸಿದವರ ಬಗ್ಗೆ ಪ್ರತಿಕ್ರಿಯಿಸಿದ ಜಮೀರ್ ಅಹ್ಮದ್, ನನ್ನ ವಿರುದ್ಧ ಪಿತೂರಿ ಮಾಡಿದವರಿಗೂ ಒಳ್ಳೆಯದಾಗಲಿ, ಅವರೂ ಚೆನ್ನಾಗಿರಲಿ ಎಂದು ತಿಳಿಸಿದ್ದಾರೆ.





