DK Shivakumar: ನಾನು ಸಿಎಂ ಸ್ಥಾನದಲ್ಲಿ ಕೂತು ಎಲ್ಲರನ್ನು ಒಟ್ಟಿಗೆ ಕರೆದೊಯ್ಯಬೇಕು ಎಂಬುದು ನನ್ನ ಆಸೆ: ಡಿಕೆಶಿ

ಬೆಂಗಳೂರು: ಪ್ರತಿಯೊಬ್ಬ ವ್ಯಕ್ತಿಗೂ ಹೊಸ ಆಲೋಚನೆಗಳಿರುತ್ತವೆ. ಹೊಸ ಆಲೋಚನೆ, ಭರವಸೆ, ನಂಬಿಕೆ ಮೂಲಕ ಜನರ ವಿಶ್ವಾಸ ಗಳಿಸುವುದು ನಮ್ಮ ಕರ್ತವ್ಯ ಎಂದು ಸಿಎಂ ಡಿಕೆ ಶಿವಕುಮಾರ್‌ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಮ್ಮ ಶಾಸಕರು, ವಿರೋಧ ಪಕ್ಷದ ಶಾಸಕರು, ನಾಯಕರು, ನಮ್ಮ ಸಚಿವ ಸಂಪುಟದ ಎಲ್ಲರನ್ನು ವಿಶ್ವಾಸಕ್ಕೆ ಪಡೆದು ರಾಜ್ಯದ ಜನರ ಅಭಿವೃದ್ಧಿಗೆ ಟೀಮ್ ಕರ್ನಾಟಕವಾಗಿ ಕೆಲಸ ಮಾಡಬೇಕು ಎಂದು ಸಿಎಂ ಡಿಕೆ ಶಿವಕುಮಾರ್ ಅವರು ಕರೆ ನೀಡಿದರು.

224 ಶಾಸಕರೂ ನನಗೆ ಒಂದೇ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚುನಾವಣೆಯಲ್ಲಿ ಜನರು ವಿವಿಧ ರೀತಿಯಲ್ಲಿ ಏನೇ ತೀರ್ಮಾನ ಮಾಡಿದ್ದರೂ ನಾವು ಒಪ್ಪಬೇಕು. ಆದರೆ ಈಗ ನನಗೆ ಸಿಕ್ಕಿರುವ ಅವಕಾಶದಲ್ಲಿ 224 ಶಾಸಕರೂ ನನ್ನ ದೃಷ್ಟಿಯಲ್ಲಿ ಒಂದೇ. ನಾನು ಈ ಸ್ಥಾನದಲ್ಲಿ ಕೂತು ಎಲ್ಲರನ್ನು ಒಟ್ಟಿಗೆ ಕರೆದೊಯ್ಯಬೇಕು ಎಂಬುದು ನನ್ನ ಆಸೆ ಎಂದು ಹೇಳಿದರು.

ಕಂಠಿ ಅವರ ಕಾಲದಿಂದ ಸಿದ್ದರಾಮಯ್ಯ ಅವರ ವರೆಗೆ ಅನೇಕ ರಾಜಕೀಯ ಮುತ್ಸದ್ಧಿಗಳು ಕಡಿದಾಳು ಮಂಜಪ್ಪ, ಕೆಂಗಲ್ ಹನುಮಂತಯ್ಯ, ದೇವರಾಜ ಅರಸು, ಗುಂಡೂರಾವ್, ನಿಜಲಿಂಗಪ್ಪ, ಬಿಡಿ ಜತ್ತಿ, ರಾಮಕೃಷ್ಣ ಹೆಗಡೆ, ವೀರೇಂದ್ರ ಪಾಟೀಲ್, ಬಂಗಾರಪ್ಪ, ವೀರಪ್ಪ ಮೋಯ್ಲಿ, ದೇವೇಗೌಡರು, ಎಸ್ ಎಂ ಕೃಷ್ಣ, ಧರಂ ಸಿಂಗ್, ಯಡಿಯೂರಪ್ಪ, ಬೊಮ್ಮಾಯಿ, ಸದಾನಂದ ಗೌಡರು, ಜಗದೀಶ್ ಶೆಟ್ಟರ್, ಸಿದ್ದರಾಮಯ್ಯ ಅವರ ಆಡಳಿತ ನೋಡಿದ್ದೇವೆ. ಎಲ್ಲರೂ ತಮ್ಮದೇ ಆದ ರೀತಿಯಲ್ಲಿ ನಾಡಿಗೆ ಕೊಡುಗೆ ನೀಡಿದ್ದಾರೆ. ನಾನು ಯಾರನ್ನು ಟೀಕೆ ಮಾಡುವುದಿಲ್ಲ ಎಂದು ಹೇಳಿದರು.

ಜೆಎಚ್ ಪಟೇಲರ ಹೃದಯ ಶ್ರೀಮಂತಿಕೆ ಬಹಳ ದೊಡ್ಡದು. ಬೇರೆಯವರ ಒತ್ತಡದಿಂದ ನನ್ನನ್ನು ಒಮ್ಮೆ ಬಂಧಿಸುವ ಸಂದರ್ಭ ಬಂದಾಗ, ನೀವು ಹೊರಗಡೆ ರಾಜಕೀಯ ಮಾಡಿಕೊಳ್ಳಿ, ನಿಮ್ಮ ರಾಜಕೀಯಕ್ಕೆ ಶಾಸಕನನ್ನು ಬಂಧಿಸುವುದಿಲ್ಲ ಎಂದು ಹೇಳಿದ್ದನ್ನು ಮುಖ್ಯಮಂತ್ರಿಗಳ ಸ್ಮರಿಸಿದರು.

ಈ ಹಿಂದೆ ಅನೇಕ ನಾಯಕರು ರಾಜ್ಯದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದು, ಕಳೆದ 3 ವರ್ಷಗಳಿಂದ ಸಿದ್ದರಾಮಯ್ಯ ಅವರು ಸಿಎಂ ಆಗಿ ನಾನು ಡಿಸಿಎಂ ಆಗಿ ಕೆಲಸ ಮಾಡಿದ್ದೆವು. ಇದು ಅದರ ಮುಂದುವರಿದ ಸರ್ಕಾರ ಎಂದರು.ಜೂನ್ 3ರಂದು ನಮ್ಮ ಪಕ್ಷದ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಕೆ ಸಿ ವೇಣುಗೋಪಾಲ್ ಹಾಗೂ ರಣದೀಪ್ ಸಿಂಗ್ ಸುರ್ಜೆವಾಲ ಅವರು ಚರ್ಚೆ ಮಾಡಿ 139 ಶಾಸಕರ ಬೆಂಬಲದೊಂದಿಗೆ ನನ್ಮನ್ನು ಈ ಸ್ಥಾನದಲ್ಲಿ ಕೂರಿಸಿದ್ದಾರೆ ಎಂದು ತಿಳಿಸಿದ್ದಾರೆ.

Share it :

Leave a Reply

Your email address will not be published. Required fields are marked *

Get free tips and resources right in your inbox, along with 10,000+ others