ಬೆಂಗಳೂರು : ಅಶ್ಲೀಲ ಕಾಮೆಂಟ್ ಪ್ರಕರಣ ವಿಚಾರವಾಗಿ ನಟಿ ರಮ್ಯಾ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಈ ಪ್ರಕರಣ ಎಲ್ಲರಿಗೂ ಒಂದು ಪಾಠವಾಗಬೇಕು ಎಂದು ಹೇಳಿದ್ದಾರೆ.
ನಟಿ ರಮ್ಯಾಗೆ ಅಶ್ಲೀಲ ಸಂದೇಶ ಹಾಗೂ ಕಾಮೆಂಟ್ಗಳನ್ನ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಕುಟುಂಬಸ್ಥರು ಕೇಸ್ ವಾಪಸ್ ಪಡೆಯುವಂತೆ ಮನವಿ ಮಾಡಿದ್ದಾರೆ. ಆದ್ರೆ, ಯಾವುದೇ ಕಾರಣಕ್ಕೂ ಕೇಸ್ ವಾಪಸ್ ಪಡೆಯಲ್ಲ ಎಂದು ಸ್ಪಷ್ಟವಾಗಿ ತಿಳಿಸಿದ್ದಾರೆ.
ಸೋಷಿಯಲ್ ಮೀಡಿಯಾ ಹಾಗೂ ಮೊಬೈಲ್ ಬಳಸಿಕೊಂಡು ಯಾರ ಬಗ್ಗೆಯಾದರೂ ಮನಬಂದಂತೆ ಕೆಟ್ಟದಾಗಿ ಕಾಮೆಂಟ್ ಮಾಡುವುದು ಸರಿಯಲ್ಲ. ʻಒಬ್ಬ ಹೆಣ್ಣುಮಗಳ ಬಗ್ಗೆ ಕೆಟ್ಟದಾಗಿ ಕಾಮೆಂಟ್ ಮಾಡುವ ಮೊದಲು ಸಾವಿರ ಬಾರಿ ಯೋಚಿಸುವಂತಾಗಬೇಕು. ಈ ಪ್ರಕರಣ ಎಲ್ಲರಿಗೂ ಒಂದು ಪಾಠವಾಗಬೇಕು ಎಂದಿದ್ದಾರೆ.
ಪ್ರಕರಣದ ವಿಚಾರಣೆ ವೇಳೆ ಆರೋಪಿಗಳ ಕುಟುಂಬಸ್ಥರು ರಮ್ಯಾ ಅವರಲ್ಲಿ ಕ್ಷಮೆ ಕೋರಿ, ಈ ಬಾರಿ ತಪ್ಪಾಗಿದೆ. ದಯವಿಟ್ಟು ಪ್ರಕರಣ ವಾಪಸ್ ಪಡೆಯಿರಿ ಎಂದು ಮನವಿ ಮಾಡಿಕೊಂಡಿದ್ದಾರೆ. ಈ ವಿಚಾರಕ್ಕೆ ಪ್ರತಿಕ್ರಿಯಿಸಿರುವ ರಮ್ಯಾ, ʻʻಇದೊಂದು ಪಾಠ ಆಗಬೇಕು. ನಾನು ಯಾವುದೇ ಕಾರಣಕ್ಕೂ ಕೇಸ್ ವಾಪಸ್ ತೆಗೆದುಕೊಳ್ಳಲ್ಲʼʼ ಎಂದು ಖಡಕ್ಕಾಗಿ ಹೇಳಿದ್ದಾರೆ
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಸಿಸಿಬಿ ಪೊಲೀಸರು ಆರೋಪಿಗಳ ವಿರುದ್ಧ ಚಾರ್ಜ್ಶೀಟ್ ಸಲ್ಲಿಸಿದ್ದಾರೆ. ಪ್ರಕರಣದ ವಿಚಾರಣೆ 6ನೇ ಸಿಟಿ ಸಿವಿಲ್ ನ್ಯಾಯಾಲಯದಲ್ಲಿ ನಡೆಯುತ್ತಿರುವ ಸಂದರ್ಭದಲ್ಲಿ ಈ ಬೆಳವಣಿಗೆ ನಡೆದಿದೆ.
ಪ್ರಕರಣದಲ್ಲಿ ಎಷ್ಟು ಬಾರಿ ಸಾಕ್ಷ್ಯ ಹೇಳಲು ಕರೆದರೂ ನ್ಯಾಯಾಲಯಕ್ಕೆ ಬಂದು ಸಾಕ್ಷ್ಯ ನೀಡಲು ಸಿದ್ಧವಿದ್ದೇನೆ. ಆದರೆ, ಆರೋಪಿಗಳನ್ನ ಕ್ಷಮಿಸುವ ಪ್ರಶ್ನೆಯೇ ಇಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.





