ಲೈಂಗಿಕ ಕಿರುಕುಳ ತಡೆ ಕಾಯ್ದೆ ಕುರಿತು ಅರಿವು ಮೂಡಿಸುವುದು ಅಗತ್ಯ : ನಾಗಲಕ್ಷ್ಮಿ ಚೌಧರಿ

ಬೆಳಗಾವಿ: ಮಹಿಳೆಯರು ಕೆಲಸ ಮಾಡುವ ಸ್ಥಳಗಳಲ್ಲಿ ಗೌರವ, ಘನತೆ ಹಾಗೂ ಸುರಕ್ಷತೆಯೊಂದಿಗೆ ಕಾರ್ಯನಿರ್ವಹಿಸಲು ಅನುಕೂಲಕರ ವಾತಾವರಣ ನಿರ್ಮಾಣವಾಗಬೇಕು. ಮಹಿಳೆಯರು ತಮ್ಮ ಹಕ್ಕುಗಳ ಅರಿವು ಪಡೆಯಬೇಕು ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ನಾಗಲಕ್ಷ್ಮಿ ಚೌಧರಿ ಹೇಳಿದ್ದಾರೆ.

ಕರ್ನಾಟಕ ರಾಜ್ಯ ಮಹಿಳಾ ಆಯೋಗ, ಬೆಳಗಾವಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಂಯುಕ್ತಾಶ್ರಯದಲ್ಲಿ ಸುವರ್ಣ ಸೌಧದ ಸೆಂಟ್ರಲ್ ಹಾಲ್ ನಲ್ಲಿ ನಡೆದ ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ ಕಾಯ್ದೆ 2013ರ ಕುರಿತು ಜಿಲ್ಲಾ ಮಟ್ಟದ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.

ಮಹಿಳೆಯರು ಯಾವುದೇ ಭಯ ಅಥವಾ ಮುಜುಗರವಿಲ್ಲದೆ ತಮ್ಮ ಸಮಸ್ಯೆಗಳನ್ನು ಮುಕ್ತವಾಗಿ ಹಂಚಿಕೊಳ್ಳುವ ಹಾಗೂ ಅಗತ್ಯ ನೆರವು ಪಡೆಯುವಂತಹ ವಾತಾವರಣವನ್ನು ನಿರ್ಮಿಸುವುದು ಎಲ್ಲರ ಜವಾಬ್ದಾರಿಯಾಗಿದೆ ಎಂದು ತಿಳಿಸಿದ್ದಾರೆ.

ಮಹಿಳೆಯರ ಸುರಕ್ಷತೆ ಹಾಗೂ ಹಕ್ಕುಗಳ ರಕ್ಷಣೆಗೆ ರಾಜ್ಯ ಮಹಿಳಾ ಆಯೋಗದಿಂದ ಹಲವು ಕಾರ್ಯಕ್ರಮಗಳನ್ನ ಜಾರಿಗೆ ತರಲಾಗಿದೆ. ಮಹಿಳೆಯರಿಗೆ ಅಗತ್ಯ ನೆರವು ಒದಗಿಸುವ ನಿಟ್ಟಿನಲ್ಲಿ ಸಹಾಯವಾಣಿ 181, 112 ಹಾಗೂ ವಾಟ್ಸಪ್ ಮೂಲಕ ಸಹಾಯ ಸಂದೇಶ ಸೇರಿದಂತೆ ವಿವಿಧ ಸೌಲಭ್ಯಗಳನ್ನ ಕಲ್ಪಿಸಲಾಗಿದೆ. ಮಹಿಳೆಯರು ತಮಗಾಗುವ ಕಿರುಕುಳ, ಅನ್ಯಾಯ ಅಥವಾ ಇತರೆ ಸಮಸ್ಯೆಗಳ ಕುರಿತು ಆಯೋಗವನ್ನು ಸಂಪರ್ಕಿಸಿ ಸೂಕ್ತ ನೆರವು ಹಾಗೂ ಮಾರ್ಗದರ್ಶನ ಪಡೆಯಬಹುದಾಗಿದೆ ಎಂದು ಹೇಳಿದರು.

ರಾಜಸ್ಥಾನದ ಮಹಿಳೆಯೊಬ್ಬರ ಪ್ರಯತ್ನವೂ ಮಹಿಳಾ ಆಯೋಗ ಸ್ಥಾಪನೆಯ ಚಿಂತನೆಗೆ ಪ್ರಮುಖ ಕಾರಣವಾಯಿತು. ಮಹಿಳೆಯರ ಹಕ್ಕುಗಳು ಹಾಗೂ ಸುರಕ್ಷತೆಯನ್ನು ಕಾಪಾಡುವ ನಿಟ್ಟಿನಲ್ಲಿ ಆಯೋಗವು ನಿರಂತರವಾಗಿ ಬದ್ಧತೆಯಿಂದ ಕಾರ್ಯನಿರ್ವಹಿಸುತ್ತಿದೆ ಎಂದು ನಾಗಲಕ್ಷ್ಮಿ ಚೌಧರಿ ಹೇಳಿದರು.

ಮಹಿಳೆಯರ ರಕ್ಷಣೆ ಹಾಗೂ ಹಕ್ಕುಗಳಿಗಾಗಿ ಮಹಿಳೆಯರೇ ರೂಪಿಸಿದ ಸಂಸ್ಥೆಯೇ ಮಹಿಳಾ ಆಯೋಗವಾಗಿದೆ. ಬಾಲ್ಯ ವಿವಾಹ ತಡೆ ಹಾಗೂ ಹೆಣ್ಣು ಭ್ರೂಣಹತ್ಯೆ ನಿರ್ಮೂಲನೆ ಸೇರಿದಂತೆ ಮಹಿಳೆಯರು ಮತ್ತು ಹೆಣ್ಣುಮಕ್ಕಳ ಮೇಲಿನ ಅನ್ಯಾಯಗಳನ್ನು ತಡೆಯುವ ಉದ್ದೇಶದಿಂದ ಮಹಿಳಾ ಆಯೋಗದ ಅಗತ್ಯತೆ ಬಲವಾಗಿ ಮೂಡಿಬಂದಿತು ಎಂದರು.

ಕಾರ್ಯಸ್ಥಳದಲ್ಲಿ ಮಹಿಳೆಯರಿಗೆ ಲೈಂಗಿಕ ಕಿರುಕುಳದಿಂದ ಮುಕ್ತವಾದ ವಾತಾವರಣ ಕಲ್ಪಿಸುವುದು ಅತ್ಯಂತ ಮಹತ್ವದ್ದಾಗಿದೆ. ಈ ನಿಟ್ಟಿನಲ್ಲಿ ಕಾರ್ಯಸ್ಥಳದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ ತಡೆ ಕಾಯ್ದೆ ಕುರಿತು ಅರಿವು ಮೂಡಿಸುವುದು ಅಗತ್ಯವಾಗಿದೆ. ಪ್ರತಿಯೊಂದು ಸಂಸ್ಥೆಯಲ್ಲಿಯೂ POSH ಕಾಯ್ದೆಯ ನಿಯಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಮೂಲಕ ಮಹಿಳೆಯರ ಗೌರವ, ಘನತೆ ಹಾಗೂ ಸುರಕ್ಷತೆಯನ್ನು ಕಾಪಾಡಬೇಕು ಎಂದು ತಿಳಿಸಿದರು.

Share it :

Leave a Reply

Your email address will not be published. Required fields are marked *

Get free tips and resources right in your inbox, along with 10,000+ others