ಬೆಂಗಳೂರು: ಇವತ್ತಿನ ಎಂಎಲ್ಸಿ ಚುನಾವಣೆಯ ಫಲಿತಾಂಶದಲ್ಲಿ ಕಾಂಗ್ರೆಸ್ ನಾಲ್ಕು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ ಎಂಬ ವಿಶ್ವಾಸವಿದೆ ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿಗಳು ನಿನ್ನೆ ಕಬ್ಬು ಬೆಳೆಗಾರರು ಮತ್ತು ಮಾಲೀಕರೊಂದಿಗೆ ನಡೆಸಿದ ಸಭೆಯಲ್ಲಿ ಒಮ್ಮತ ಮೂಡಿಲ್ಲ ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿ, ಈ ಕುರಿತು ತಮಗೆ ಹೆಚ್ಚಿನ ಮಾಹಿತಿ ಇಲ್ಲ. ಆದರೆ, ಮುಖ್ಯಮಂತ್ರಿಗಳು ಸಮಸ್ಯೆಗಳನ್ನು ಬಗೆಹರಿಸುವ ವಿಶ್ವಾಸವನ್ನು ಅವರಿಗೆ ನೀಡಿದ್ದಾರೆ. ಈ ವಿಚಾರದಲ್ಲಿ ಕೇಂದ್ರ ಸರ್ಕಾರ ಕೈಗೊಳ್ಳಬೇಕಾದ ನಿರ್ಧಾರಗಳೂ ಇವೆ. ಆದರೂ ರಾಜ್ಯ ಸರ್ಕಾರದ ವತಿಯಿಂದ ಏನೆಲ್ಲ ನೆರವು ನೀಡಲು ಸಾಧ್ಯವಿದೆಯೋ ಅದನ್ನು ಮಾಡುವುದಾಗಿ ಮುಖ್ಯಮಂತ್ರಿಗಳು ಭರವಸೆ ನೀಡಿದ್ದಾರೆ ಎಂದು ತಿಳಿಸಿದರು.
ಕೆಇಎ ಸ್ವತಂತ್ರ ಸಂಸ್ಥೆಯಾಗಿದ್ದು, ಅದರ ಕಾರ್ಯಚಟುವಟಿಕೆಗಳಲ್ಲಿ ಸರ್ಕಾರ ಹಸ್ತಕ್ಷೇಪ ಮಾಡಬಾರದು. ಅದಕ್ಕಾಗಿಯೇ ಸಂಸ್ಥೆಗೆ ಸ್ವಾಯತ್ತ ಸ್ಥಾನಮಾನ ನೀಡಲಾಗಿದೆ. ಪರೀಕ್ಷೆಗಳನ್ನು ಯಾವಾಗ ನಡೆಸಬೇಕು ಎಂಬುದನ್ನು ಸಂಸ್ಥೆಯೇ ನಿರ್ಧರಿಸಲಿದೆ ಎಂದು ಸ್ಪಷ್ಟಪಡಿಸಿದರು.
ಕೆಎಎಸ್ ಪರೀಕ್ಷೆಗಳನ್ನು ಮುಂದೂಡಬೇಕು ಹಾಗೂ ಈ ಹಿಂದೆ ನಡೆದ 384 ಹುದ್ದೆಗಳ ನೇಮಕಾತಿ ಪರೀಕ್ಷೆಯ ಪ್ರಕ್ರಿಯೆಯನ್ನು ಮೊದಲು ಪೂರ್ಣಗೊಳಿಸಿದ ಬಳಿಕ ಮುಂದಿನ ಪರೀಕ್ಷೆಗಳನ್ನು ನಡೆಸಬೇಕು ಎಂಬ ಅಭ್ಯರ್ಥಿಗಳ ಆಗ್ರಹದ ಕುರಿತು, ಪರೀಕ್ಷೆಗಳನ್ನು ಯಾವಾಗ ನಡೆಸಬೇಕು ಎಂಬುದನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ನಿರ್ಧರಿಸುತ್ತದೆ ಎಂದರು.
ಇನ್ಪುಟ್ ಸಬ್ಸಿಡಿ ವಿತರಣೆಯಲ್ಲಿ ವಿಳಂಬವಾಗುತ್ತಿರುವ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಸಬ್ಸಿಡಿ ಬಿಡುಗಡೆಗೆ ಸಂಬಂಧಿಸಿದಂತೆ ಈಗಾಗಲೇ ಆದೇಶ ನೀಡಿ ಒಂದು ವಾರ ಕಳೆದಿದೆ. ಈ ಕುರಿತು ಇಂದು ಮತ್ತೊಮ್ಮೆ ಪರಿಶೀಲನೆ ನಡೆಸಿ, ಸಂಬಂಧಪಟ್ಟವರೊಂದಿಗೆ ಚರ್ಚಿಸುವುದಾಗಿ ತಿಳಿಸಿದರು.
ಬರ ಪರಿಹಾರಕ್ಕಾಗಿ ಕೇಂದ್ರ ಸರ್ಕಾರದ ಬಳಿಗೆ ಸರ್ವಪಕ್ಷ ನಿಯೋಗವನ್ನು ಕರೆದೊಯ್ಯುವ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಮುಖ್ಯಮಂತ್ರಿಗಳು ಪ್ರವಾಸದಲ್ಲಿದ್ದ ಕಾರಣ ಈ ಕುರಿತು ಅವರೊಂದಿಗೆ ಮಾತನಾಡಲು ಸಾಧ್ಯವಾಗಿಲ್ಲ. ಇಂದು ಅಥವಾ ನಾಳೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸುವುದಾಗಿ ತಿಳಿಸಿದರು.
ಸಾಮಾನ್ಯವಾಗಿ ಪದವೀಧರರ ಮತ್ತು ಶಿಕ್ಷಕರ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಸ್ವಲ್ಪ ಹಿನ್ನಡೆಯನ್ನು ಅನುಭವಿಸುತ್ತಿತ್ತು. ಆದರೆ, ಈ ಬಾರಿ ಪದವೀಧರರು ಹಾಗೂ ಶಿಕ್ಷಕರ ಹಲವು ಸಮಸ್ಯೆಗಳನ್ನು ಸರ್ಕಾರ ಬಗೆಹರಿಸಿದೆ. ಹೀಗಾಗಿ ಅವರು ಸರ್ಕಾರವನ್ನು ಬೆಂಬಲಿಸುವ ವಿಶ್ವಾಸವಿದೆ. ಸಭೆಗಳನ್ನು ನಡೆಸಿದ ಸಂದರ್ಭದಲ್ಲಿಯೂ ಸರ್ಕಾರವನ್ನು ಬೆಂಬಲಿಸುವುದಾಗಿ ಅವರು ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ನಾಲ್ಕು ಕ್ಷೇತ್ರಗಳಲ್ಲಿಯೂ ಕಾಂಗ್ರೆಸ್ ಗೆಲುವು ಸಾಧಿಸಲಿದೆ ಎಂಬ ವಿಶ್ವಾಸವಿದೆ ಎಂದು ಹೇಳಿದರು.





