ಲಖನೌ: ‘ಮತಗಳ್ಳತನ’ ಆರೋಪ ಕುರಿತು ಚರ್ಚಿಸಲು ಸಂಸತ್ ವಿಶೇಷ ಅಧಿವೇಶನ ನಡೆಸಲು ಬಿಜೆಪಿ ಸಿದ್ಧವಿದೆ. ಆದರೆ, ವಿರೋಧ ಪಕ್ಷಗಳಿಗೆ ಚರ್ಚೆಯಲ್ಲಿ ಆಸಕ್ತಿಯಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಆರೋಪಿಸಿದ್ದಾರೆ.
ರಾಹುಲ್ ಗಾಂಧಿ ಮತ್ತು ಅಖಿಲೇಶ್ ಯಾದವ್ ಅವರಿಗೆ ನಾನು ಸವಾಲು ಹಾಕುತ್ತೇನೆ. ಸಂಸತ್ತಿನ ಒಳಗೆ ಪ್ರತಿಯೊಂದು ಆರೋಪದ ಬಗ್ಗೆಯೂ ಚರ್ಚಿಸಲು ಬಿಜೆಪಿ ಸಿದ್ಧವಿದೆ. ಆದರೆ, ಅವರು ಚರ್ಚೆಗೆ ಸಿದ್ಧರಿಲ್ಲ ಎಂದು ಲಖನೌನಲ್ಲಿ ಪಕ್ಷದ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಶಾ, ಚುನಾವಣಾ ಆಯೋಗದ ವಿರುದ್ಧದ ಆರೋಪಗಳನ್ನು ಆಧಾರರಹಿತ ಎಂದು ತಳ್ಳಿಹಾಕಿದರು.
ಹರಿಯಾಣ, ಮಹಾರಾಷ್ಟ್ರ, ಬಿಹಾರ, ದೆಹಲಿ, ಪುದುಚೇರಿ, ಅಸ್ಸಾಂ ಮತ್ತು ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸಾಧಿಸಿದ ಗೆಲುವುಗಳನ್ನು ಉಲ್ಲೇಖಿಸಿದ ಅವರು, ಪಶ್ಚಿಮ ಬಂಗಾಳದ ಬೆಳವಣಿಗೆಗಳ ಬಳಿಕ ಅವರಿಗೆ ಚುನಾವಣೆಯಲ್ಲಿ ಗೆಲ್ಲಲು ಸಾಧ್ಯವೇ ಇಲ್ಲ ಎಂಬುದು ಮನವರಿಕೆಯಾಗಿದೆ. ಸಹಜವಾಗಿಯೇ, ಪಂದ್ಯ ಅಥವಾ ಆಟದಲ್ಲಿ ಸೋತ ತಂಡ ಹೆಚ್ಚು ಅಭ್ಯಾಸ ಮಾಡಬೇಕು. ಅದನ್ನೇ ನಿರೀಕ್ಷಿಸಲಾಗುತ್ತದೆ ಅಲ್ಲವೇ ಎಂದು ಪ್ರಶ್ನಿಸಿದರು.
ಆದರೆ, ಸೋಲನ್ನು ಒಪ್ಪಿಕೊಳ್ಳುವ ಬದಲು ಅಂಪೈರ್ ಮೋಸ ಮಾಡಿದ್ದಾರೆ, ಮತಗಳನ್ನು ಕಳವು ಮಾಡಲಾಗಿದೆ ಎಂದು ಆರೋಪಿಸಲು ಆರಂಭಿಸಿದರು ಎಂದು ಟೀಕಿಸಿದರು.
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಇಂದು INDIA ಮೈತ್ರಿಕೂಟವು ಸಾರ್ವಜನಿಕ ದೋಷಾರೋಪಣೆ ಕಾರ್ಯಕ್ರಮ ನಡೆಸಲು ಹಾಗೂ ‘ಮತ ಉಳಿಸಿ, ದೇಶ ಉಳಿಸಿ’ ಘೋಷಣೆಯೊಂದಿಗೆ ನಾಳೆ ರಾಮಲೀಲಾ ಮೈದಾನದಲ್ಲಿ ಪ್ರತಿಭಟನಾ ರ್ಯಾಲಿ ಆಯೋಜಿಸಲು ಸಿದ್ಧತೆ ನಡೆಸಿರುವ ಬೆನ್ನಲ್ಲೇ ಅಮಿತ್ ಶಾ ಈ ಹೇಳಿಕೆ ನೀಡಿದ್ದಾರೆ.
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ವಿರೋಧ ಪಕ್ಷಗಳ ಆಂದೋಲನ ತೀವ್ರಗೊಳ್ಳುತ್ತಿದೆ. ಅವರು ಪಕ್ಷಪಾತದ ಧೋರಣೆ ಅನುಸರಿಸುತ್ತಿದ್ದಾರೆ ಹಾಗೂ ಮತದಾರರ ಪಟ್ಟಿಯ ಪರಿಷ್ಕರಣೆಯನ್ನು ಸಮರ್ಪಕವಾಗಿ ನಿರ್ವಹಿಸಿಲ್ಲ ಎಂದು ವಿರೋಧ ಪಕ್ಷಗಳು ಆರೋಪಿಸಿವೆ. ಈ ಪರಿಷ್ಕರಣೆಯಿಂದ ಅರ್ಹ ಮತದಾರರ ಹೆಸರುಗಳನ್ನು ದೊಡ್ಡ ಪ್ರಮಾಣದಲ್ಲಿ ಅಳಿಸಲಾಗಿದೆ ಎಂದು ದೂರಿರುವ ಪಕ್ಷಗಳು, ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಒತ್ತಾಯಿಸುತ್ತಿವೆ.
ಈ ಎರಡೂ ಕಾರ್ಯಕ್ರಮಗಳು ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಜ್ಞಾನೇಶ್ ಕುಮಾರ್ ಅವರು ಭಾರತೀಯ ಪ್ರಜಾಪ್ರಭುತ್ವವನ್ನು ನಾಶಪಡಿಸುತ್ತಿರುವುದರ ವಿರುದ್ಧದ ಹೋರಾಟವಾಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ರಾಜಕೀಯ ಪಕ್ಷಗಳು, ನಾಗರಿಕ ಸಮಾಜದ ಸಂಘಟನೆಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪ್ರತಿಭಟನಾ ಮೆರವಣಿಗೆಯಲ್ಲಿ ಪಾಲ್ಗೊಳ್ಳುವಂತೆ ಅವರು ಮನವಿ ಮಾಡಿದ್ದಾರೆ.
ಮೆರವಣಿಗೆಯಲ್ಲಿ ಪಾಲ್ಗೊಳ್ಳಲು ದೆಹಲಿಗೆ ಆಗಮಿಸುವ ಜನರನ್ನು ತಡೆಯಲು ಅಮಿತ್ ಶಾ ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿರುವ ರಾಹುಲ್ ಗಾಂಧಿ, ಉತ್ತರ ಪ್ರದೇಶ, ಬಿಹಾರ, ಮಧ್ಯಪ್ರದೇಶ, ರಾಜಸ್ಥಾನ, ಹರಿಯಾಣ, ತೆಲಂಗಾಣ ಮತ್ತು ಪಂಜಾಬ್ನಿಂದ ದೆಹಲಿಗೆ ಪ್ರಯಾಣಿಸುತ್ತಿರುವ ಪಕ್ಷದ ಕಾರ್ಯಕರ್ತರು ಹಾಗೂ ಸಾಮಾನ್ಯ ನಾಗರಿಕರನ್ನು ತಡೆಯಲಾಗುತ್ತಿದೆ ಎಂದು ದೂರಿದ್ದಾರೆ.
ನಾವು ಮುಚ್ಚಿಡುವಂಥದ್ದು ಏನೂ ಇಲ್ಲ. ಸಂಸತ್ ವಿಶೇಷ ಅಧಿವೇಶನ ಕರೆಯೋಣ. ಆದರೆ, ಅಲ್ಲಿ ಮಾತನಾಡುವ ಉದ್ದೇಶ ಅವರಿಗಿಲ್ಲ. ಸಂಸತ್ತಿನ ಕಲಾಪ ನಡೆಯಲು ಅವರು ಬಿಡುವುದಿಲ್ಲ. ಬದಲಾಗಿ ಗದ್ದಲ ಸೃಷ್ಟಿಸುತ್ತಾರೆ ಎಂದು ಅಮಿತ್ ಶಾ ಹೇಳಿದರು.




