ಬೆಂಗಳೂರು: ಸಿದ್ದರಾಮಯ್ಯ ಅವರ ಸ್ಟಿಂಗ್ ಆಪರೇಷನ್ ಮಾಡಿಸಿದ್ದು ಕಾಂಗ್ರೆಸ್ ನಾಯಕರೇ ಎಂಬುದು ಸಾಬೀತಾಗಿದೆ. 2028ರ ವಿಧಾನಸಭಾ ಚುನಾವಣೆಯಲ್ಲಿ ಜನರೇ ಕಾಂಗ್ರೆಸ್ ಸರ್ಕಾರವನ್ನು ಅಧಿಕಾರದಿಂದ ಕೆಳಗಿಳಿಸಲಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಆರ್ ಅಶೋಕ್, ಭವಿಷ್ಯ ನುಡಿದಿದ್ದಾರೆ.
ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಆರ್. ಅಶೋಕ್, ಸಿದ್ದರಾಮಯ್ಯ ಅವರ ಬೆಂಬಲಿಗರು ಮತ್ತು ಮತದಾರರು ಕೂಡ ಕಾಂಗ್ರೆಸ್ ವಿರುದ್ಧ ನಿಂತಿದ್ದಾರೆ. ಇದರ ಪರಿಣಾಮ 2028ರ ವಿಧಾನಸಭಾ ಚುನಾವಣೆಯಲ್ಲೂ ಕಾಣಿಸಿಕೊಳ್ಳಲಿದೆ ಎಂದು ಅಶೋಕ್ ಹೇಳಿದ್ದಾರೆ.
ಹಾಲು ಮತ್ತು ಬಸ್ ದರ ಏರಿಕೆ, ಖಜಾನೆಯ ಸ್ಥಿತಿ ಸೇರಿದಂತೆ ಹಲವು ವಿಚಾರಗಳನ್ನು ಉಲ್ಲೇಖಿಸಿ, ಸರ್ಕಾರದ ಆಡಳಿತದಿಂದ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಟೀಕಿಸಿದ್ದಾರೆ.
ಚುನಾವಣೆಯ ಸಮಯದಲ್ಲಿ ನಿಮ್ಮ ಸರ್ಕಾರವನ್ನು ಕಿತ್ತು ಮೂಲೆಗೆ ಬಿಸಾಡುವ ಆಪರೇಷನ್‌ನ್ನು ಜನರೇ ಮಾಡಲಿದ್ದಾರೆ ಎಂದು ಸಿಎಂಗೆ ಅಶೋಕ್ ಎಚ್ಚರಿಕೆ ನೀಡಿದ್ದಾರೆ.
ಸಿಎಂ ಡಿ. ಕೆ ಶಿವಕುಮಾರ್ ಸರ್ಕಾರದ ವಿರುದ್ಧ ಹಲವು ಆರೋಪಗಳನ್ನು ಮಾಡಿರುವ ಅಶೋಕ್, ಆಂತರಿಕ ಕಚ್ಚಾಟ, ರೈತರಿಗೆ ಪರಿಹಾರ ನೀಡುವಲ್ಲಿ ವಿಳಂಬ, ಹಿರಿಯ ನಾಗರಿಕರು ಮತ್ತು ವಿಕಲಚೇತನರ ಪಿಂಚಣಿ ಸಮಸ್ಯೆ ಹಾಗೂ ಇಲಾಖೆಗಳ ಅನುದಾನದ ಕೊರತೆಯನ್ನು ಪ್ರಸ್ತಾಪಿಸಿದ್ದಾರೆ.
ಸ್ಟಿಂಗ್ ಆಪರೇಷನ್ ವಿವಾದದ ಪರಿಣಾಮ ವಿಧಾನಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ನೆಲಕಚ್ಚಿದೆ. ಹಿರಿಯ ನಾಯಕ ಕೆ.ಎನ್. ರಾಜಣ್ಣ ಅವರೂ ಈ ಬಗ್ಗೆ ಭವಿಷ್ಯ ನುಡಿದಿದ್ದಾರೆ ಎಂದು ಉಲ್ಲೇಖಿಸಿದ್ದಾರೆ.




