ತುಮಕೂರು: ಸರ್ಕಾರಿ ಆಸ್ಪತ್ರೆಗಳಲ್ಲಿ ಸುಮಾರು ಶೇ.95ರಷ್ಟು ಸೌಲಭ್ಯಗಳು ಲಭ್ಯವಿದ್ದು, ವೈದ್ಯಕೀಯ ಸಿಬ್ಬಂದಿ ಅಥವಾ ಔಷಧಗಳ ಯಾವುದೇ ಗಂಭೀರ ಕೊರತೆಯಿಲ್ಲ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ಹೇಳಿದ್ದಾರೆ.
ಪ್ರಗತಿ ಪರಿಶೀಲನಾ ಸಭೆಯ ಬಳಿಕ ಮಾತನಾಡಿದ ಯು ಟಿ ಖಾದರ್, ನಕಲಿ ವೈದ್ಯರ ಹಾವಳಿ ಕುರಿತು ಮಾತನಾಡಿದ ಖಾದರ್, ಈ ಸಮಸ್ಯೆಯನ್ನು ನಿಯಂತ್ರಿಸಲು ಆರೋಗ್ಯ ಇಲಾಖೆಯ ಅಧಿಕಾರಿಗಳು ಹಾಗೂ ಚುನಾಯಿತ ಪ್ರತಿನಿಧಿಗಳ ಸಹಕಾರ ಅಗತ್ಯ ಎಂದು ಹೇಳಿದರು.
ತುಮಕೂರಿನ ಜಿಲ್ಲಾ ಆಸ್ಪತ್ರೆಯನ್ನು ಸೂಪರ್ ಸ್ಪೆಷಾಲಿಟಿ ಕೇಂದ್ರವಾಗಿ ಮೇಲ್ದರ್ಜೆಗೇರಿಸಲಾಗುತ್ತಿದ್ದು, ಅಲ್ಲಿ ಪ್ರತ್ಯೇಕ ತುರ್ತು ಹೃದ್ರೋಗ ಚಿಕಿತ್ಸಾ ಘಟಕವನ್ನು ಸ್ಥಾಪಿಸಲಾಗುವುದು. ಜಿಲ್ಲಾ ಕ್ಯಾನ್ಸರ್ ಆಸ್ಪತ್ರೆಯಲ್ಲಿ ಸೂಕ್ತ ವೈದ್ಯಕೀಯ ಉಪಕರಣಗಳನ್ನು ಅಳವಡಿಸಲು ಶೀಘ್ರದಲ್ಲೇ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದರು.
ಸರ್ಕಾರಿ ಆಸ್ಪತ್ರೆಗಳಲ್ಲಿ ಸಿಬ್ಬಂದಿಯ ಹಾಜರಾತಿ ಮೇಲೆ ನಿಗಾ ಇಡುವುದು ಮತ್ತು ರೋಗಿಗಳಿಗೆ ಸಕಾಲದಲ್ಲಿ ಚಿಕಿತ್ಸೆ ದೊರೆಯುವುದನ್ನು ಖಚಿತಪಡಿಸಿಕೊಳ್ಳಲು ಕೃತಕ ಬುದ್ಧಿಮತ್ತೆ (AI) ಆಧಾರಿತ ಕ್ಯಾಮೆರಾಗಳನ್ನು ಅಳವಡಿಸುವ ಪ್ರಸ್ತಾವನೆಯನ್ನೂ ಸರ್ಕಾರ ಪರಿಶೀಲಿಸುತ್ತಿದೆ ಎಂದು ಹೇಳಿದರು.
ಮಹಿಳೆಯರು ಮತ್ತು ಮಕ್ಕಳಿಗೆ ಆರೋಗ್ಯ ಸೇವೆ ಒದಗಿಸುವ ಆಸ್ಪತ್ರೆಗಳು ಸೇರಿದಂತೆ ಸರ್ಕಾರಿ ಆಸ್ಪತ್ರೆಗಳಲ್ಲಿ ಸೌಲಭ್ಯಗಳಿಗೆ ಸಂಬಂಧಿಸಿದ ಸಮಸ್ಯೆಗಳನ್ನು ತಕ್ಷಣವೇ ಪರಿಹರಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಹೇಳಿದರು.
ಔಷಧಗಳ ಕೊರತೆ, ವೈದ್ಯರು ಅಥವಾ ಔಷಧ ವಿತರಕರ ಅಭಾವದಂತಹ ಸಮಸ್ಯೆಗಳಿದ್ದರೆ ಯಾವುದೇ ವಿಳಂಬವಿಲ್ಲದೆ ಸರ್ಕಾರದ ಗಮನಕ್ಕೆ ತರಬೇಕು ಎಂದು ತಿಳಿಸಿದರು.





