ಬೆಂಗಳೂರು: ಹಿಂದಿನ ಆರೋಪಗಳಿಗೆ ಸಂಬಂಧಿಸಿದಂತೆ ಸಚಿವ ಬಿ. ನಾಗೇಂದ್ರ ಅವರಿಗೆ ಲೋಕಾಯುಕ್ತ ಹಾಗೂ ಎಸ್ಐಟಿ ಈಗಾಗಲೇ ಕ್ಲೀನ್ಚಿಟ್ ನೀಡಿವೆ. ಹೀಗಾಗಿ ಅವರು ರಾಜೀನಾಮೆ ನೀಡುವ ಅಗತ್ಯವಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ಬೆಂಗಳೂರಿನಲ್ಲಿಂದು ಮಾತಾಡಿದ ಅವರು, ನಾಗೇಂದ್ರ ಅವರನ್ನು ಸಚಿವ ಸ್ಥಾನದಿಂದ ಕೈಬಿಡುವಂತೆ ಬಿಜೆಪಿ ನಡೆಸುತ್ತಿರುವ ಹೋರಾಟ ರಾಜಕೀಯ ಪ್ರೇರಿತವಾಗಿದೆ ಎಂದು ಅವರು ಆರೋಪಿಸಿದ್ದಾರೆ.
ಬಿಜೆಪಿ ಮತ್ತು ಜೆಡಿಎಸ್ನ ಶಾಸಕರು ಸಚಿವ ಬಿ. ನಾಗೇಂದ್ರ ಅವರನ್ನು ಸಚಿವ ಸಂಪುಟದಿಂದ ಕೈಬಿಡುವಂತೆ ಆಗ್ರಹಿಸಿ ಇಂದು ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದಾಗ ಪೊಲೀಸರು ವಶಕ್ಕೆ ಪಡೆದ ಪ್ರಸಂಗ ನಡೆದಿದೆ.
89 ಕೋಟಿ ರೂಪಾಯಿ ಮೌಲ್ಯದ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ನಾಗೇಂದ್ರ ಭಾಗಿಯಾಗಿದ್ದಾರೆ ಎಂಬ ಆರೋಪವಿದ್ದು, ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಬೇಕು ಎಂದು ಪ್ರತಿಪಕ್ಷಗಳು ಆಗ್ರಹಿಸಿವೆ.
2024ರ ಮೇ-ಜೂನ್ನಲ್ಲಿ ವಾಲ್ಮೀಕಿ ನಿಗಮದ ಖಾತೆಗಳ ಅಧೀಕ್ಷಕ ಪಿ. ಚಂದ್ರಶೇಖರನ್ ಆತ್ಮಹತ್ಯೆ ಮಾಡಿಕೊಂಡು, ನಿಗಮದಲ್ಲಿ ಹಣಕಾಸಿನ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ ಡೆತ್ನೋಟ್ ಬರೆದಿದ್ದ ಹಿನ್ನೆಲೆಯಲ್ಲಿ ವಾಲ್ಮೀಕಿ ನಿಗಮದ ವಿವಾದ ಭುಗಿಲೆದ್ದಿತ್ತು.
ಧರ್ಮೇಂದ್ರ ಪ್ರಧಾನ್ ಅವರು ನೀಟ್ ಪರೀಕ್ಷೆ ಅಕ್ರಮ ಹಿನ್ನೆಲೆಯಲ್ಲಿ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕಾಗಿತ್ತು, ಅದು ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯದ ಪ್ರಶ್ನೆಯಾಗಿತ್ತು. ಆದರೆ ನಾಗೇಂದ್ರ ವಿಚಾರದಲ್ಲಿ ಹಾಗಲ್ಲ ಎಂದು ಹೇಳಿದ್ದಾರೆ.





