ಬೆಂಗಳೂರು : ನೂತನ ಮುಖ್ಯಮಂತ್ರಿಯಾಗಿ ರಾಜ್ಯದ ಚುಕ್ಕಾಣಿ ಹಿಡಿಯಲಿರುವ ಡಿ.ಕೆ. ಶಿವಕುಮಾರ್ ಅವರ ನೇತೃತ್ವ ಹಾಗೂ ಪಕ್ಷದ ವರಿಷ್ಠರ ಮಾರ್ಗದರ್ಶನದಲ್ಲಿ ಸರ್ಕಾರ ಉತ್ತಮ ಆಡಳಿತ ನೀಡಲಿದ್ದು, ರಾಜ್ಯದ ಅಭಿವೃದ್ಧಿಗೆ ಬದ್ಧವಾಗಿದೆ ಎಂದು ಸಂಪುಟಕ್ಕೆ ಸೇರ್ಪಡೆಯಾಗಲಿರುವ ಕಾಂಗ್ರೆಸ್ ಮುಖಂಡ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.
ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿದ ಅವರು, ಸುದ್ದಿಗಾರರೊಂದಿಗೆ ಮಾತನಾಡಿ, ತಮ್ಮ ಮೇಲೆ ಮತ್ತೊಮ್ಮೆ ವಿಶ್ವಾಸವಿಟ್ಟು ನೂತನ ಸಚಿವ ಸಂಪುಟದಲ್ಲಿ ಸ್ಥಾನ ನೀಡಿರುವ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧೀ, ವರಿಷ್ಠರಾದ ಸೋನಿಯಾಗಾಂಧಿ ಮತ್ತು ರಾಜ್ಯ ಉಸ್ತುವಾರಿಗಳಾದ ರಣದೀಪ್ ಸುರ್ಜೇವಾಲಾ, ಕೆ.ಸಿ. ವೇಣುಗೋಪಾಲ್ ಮತ್ತು ನಿಯೋಜಿತ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಸಿಡಬ್ಲ್ಯುಸಿ ಸದಸ್ಯರಾದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದರು.
ಪಕ್ಷದ ವರಿಷ್ಠರ ವಿಶ್ವಸಕ್ಕೆ ಚ್ಯುತಿಯಾಗದಂತೆ ಪ್ರಾಮಾಣಿಕತೆಯಿಂದ, ದಕ್ಷತೆಯಿಂದ ರಾಜ್ಯದ ಅಭಿವೃದ್ಧಿ ಮತ್ತು ಕಲ್ಯಾಣ ಕರ್ನಾಟಕದ ಅದರಲ್ಲೂ ಬೀದರ್ ಜಿಲ್ಲೆಯ ಅಭಿವೃದ್ಧಿಗಾಗಿ ಶಕ್ತಿ ಮೀರಿ ಶ್ರಮಿಸುವುದಾಗಿ ಈಶ್ವರ ಖಂಡ್ರೆ ತಿಳಿಸಿದರು.
ಮಾಧ್ಯಮ ಮಿತ್ರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಬಿ.ಕೆ. ಹರಿಪ್ರಸಾದ್ ಅವರು ಹಲವು ದಶಕಗಳಿಂದ ಪಕ್ಷಕ್ಕಾಗಿ ದುಡಿದಿದ್ದಾರೆ. ಸಂಘಟನೆಯಲ್ಲಿ ಅನುಭವ ಹೊಂದಿದ್ದಾರೆ. ವರಿಷ್ಠರು ಜಾತಿ, ವಲಯ, ಪ್ರದೇಶ, ಪಕ್ಷಕ್ಕೆ ನೀಡಿರುವ ಕೊಡುಗೆ ಎಲ್ಲವನ್ನ ಪರಿಗಣಿಸಿ ಸೂಕ್ತ ನಿರ್ಧಾರ ಕೈಗೊಂಡಿರುತ್ತಾರೆ. ನಾವೆಲ್ಲರೂ ಅವರೊಂದಿಗೆ ಕೈಜೋಡಿಸಿ ಪಕ್ಷದ ಬಲವರ್ಧನೆಗಾಗಿ ಶ್ರಮಿಸುತ್ತೇವೆ ಎಂದು ಈಶ್ವರ ಖಂಡ್ರೆ ತಿಳಿಸಿದರು.




