ಬೆಂಗಳೂರು: ಪ್ರಸಕ್ತ ಸಾಲಿನ ರಾಜ್ಯ ಶಾಸನಸಭೆಯ ಚಳಿಗಾಲದ ಅಧಿವೇಶನವನ್ನು ಡಿಸೆಂಬರ್ 7ರಿಂದ 18ರವರೆಗೆ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಸಲು ಸರ್ಕಾರ ನಿರ್ಧರಿಸಿದೆ. ಈ ಹಿನ್ನೆಲೆಯಲ್ಲಿ ಅಧಿವೇಶನಕ್ಕೆ ಅಗತ್ಯವಿರುವ ಎಲ್ಲಾ ರಕ್ಷಣೆ ಹಾಗೂ ಪೂರ್ವ ಸಿದ್ಧತೆಗಳನ್ನು ತಕ್ಷಣದಿಂದಲೇ ಆರಂಭಿಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಪ್ರತಿ ವರ್ಷದಂತೆ ಈ ಬಾರಿಯೂ ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಚರ್ಚೆಗೆ ವೇದಿಕೆ ಕಲ್ಪಿಸಲು ಸರ್ಕಾರ ಬೆಳಗಾವಿಯಲ್ಲೇ ಅಧಿವೇಶನ ಆಯೋಜಿಸುತ್ತಿದೆ.
ಅಕ್ಟೋಬರ್ 15ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಬೆಳಗಾವಿ ಅಧಿವೇಶನದ ಕುರಿತು ಕೂಲಂಕಷವಾಗಿ ಚರ್ಚಿಸಲಾಗಿತ್ತು. ಈ ವೇಳೆ ಡಿಸೆಂಬರ್ 7ರಿಂದ ಒಟ್ಟು 10 ದಿನಗಳ ಕಾಲ ಅಧಿವೇಶನ ನಡೆಸುವುದು ಸೂಕ್ತ ಎಂಬ ಅಭಿಪ್ರಾಯಕ್ಕೆ ಬರಲಾಗಿತ್ತು. ಅದರಂತೆ, ಡಿ.7ರಿಂದ 18ರವರೆಗಿನ ದಿನಾಂಕಗಳನ್ನು ನಿಗದಿಪಡಿಸಲಾಗಿದ್ದು, ಸುವರ್ಣ ವಿಧಾನಸೌಧದಲ್ಲಿ ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಸಾರ್ವಜನಿಕರಿಗೆ ಯಾವುದೇ ರೀತಿಯ ವಸತಿ, ಸಾರಿಗೆ ಹಾಗೂ ಭದ್ರತಾ ಕೊರತೆಯಾಗದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಕಾರ್ಯದರ್ಶಿಗಳು ಸೂಚಿಸಿದ್ದಾರೆ.





